ಉಡುಪಿ : ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಚುನಾವಣಾ ಗೆಲುವು ನಿಶ್ಚಿತವಾಗಿದ್ದು ಹೆಚ್ಚಿನ ಮತಗಳ ಅಂತರವನ್ನು ದಾಖಲಿಸುವ ಮೂಲಕ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು.
ಲೋಕಸಭಾ ಚುನಾವಣೆಯ ಬಳಿಕ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ, ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳು ನಡೆಯಲಿದ್ದು ಪ್ರಸಕ್ತ ಲೋಕಸಭಾ ಚುನಾವಣೆಯ ಉತ್ತಮ ಫಲಿತಾಂಶ ಮುoದಿನ ಚುನಾವಣೆಗಳಿಗೆ ಸ್ಫೂರ್ತಿ ತುಂಬಲಿದೆ. ಈ ನಿಟ್ಟಿನಲ್ಲಿ ಪಕ್ಷದ ಪ್ರಮುಖರು, ಅನನ್ಯ ಜವಾಬ್ದಾರಿಗಳನ್ನು ಹೊಂದಿರುವ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉತ್ತಮ ಪೂರ್ವ ತಯಾರಿಯೊಂದಿಗೆ ಬದ್ಧತೆಯಿಂದ ತೊಡಗಿಸಿಕೊಂಡು ಲೋಕಸಭಾ ಚುನಾವಣೆಯನ್ನು ಎಚ್ಚರಿಕೆಯಿಂದ ಎದುರಿಸಬೇಕಾಗಿದೆ. ಪ್ರಧಾನಿ ಮೋದಿ ಕರೆಯoತೆ ಪ್ರತೀ ಬೂತ್ ಗಳಲ್ಲಿ ಹೆಚ್ಚಿನ ಮತ ಗಳಿಕೆಯೊಂದಿಗೆ ಬೂತ್ ಗೆಲ್ಲುವ ಮೂಲಕ ದೇಶ ಗೆಲ್ಲುವ ಸಂಕಲ್ಪದೊಂದಿಗೆ ಪಕ್ಷದ ಅಭ್ಯರ್ಥಿಯ ದೊಡ್ಡ ಅಂತರದ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯು ವಿವಿಧ ನಿಗದಿತ ಚಟುವಟಿಕೆಗಳಲ್ಲಿ ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಿದೆ. ಏ.11 ಮತ್ತು 12ರಂದು ಬೂತ್ ಕಾರ್ಯ ಅಭಿಯಾನದ ಅಂಗವಾಗಿ ಎಲ್ಲ ಬೂತ್ ಗಳಲ್ಲಿ ಪೂರ್ವಸಿದ್ಧತಾ ಸಭೆಗಳು ನಡೆಯಲಿವೆ. ಏ.15ರಿಂದ 17ರ ವರೆಗೆ ಮೊದಲ ಸುತ್ತಿನ ಚುನಾವಣಾ ಪ್ರಚಾರ ಕಾರ್ಯ ನಡೆಯಲಿದ್ದು, ಏ.20ರಿಂದ 22ರ ವರೆಗೆ ಚುನಾವಣಾ ಪ್ರಚಾರದ ಮಹಾ ಅಭಿಯಾನ ನಡೆಯಲಿದೆ. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಎಲ್ಲ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷದ ಅಭ್ಯರ್ಥಿಯ ಪ್ರಚಂಡ ಗೆಲುವಿಗೆ ಬದ್ಧತೆಯಿಂದ ಕೈಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಚುನಾವಣಾ ಪ್ರಭಾರಿಗಳಾದ ನಯನಾ ಗಣೇಶ್, ರಾಜೇಶ್ ಕಾವೇರಿ, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರೆ ಗೀತಾoಜಲಿ ಎಮ್. ಸುವರ್ಣ ಸಹಿತ ಪಕ್ಷದ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು, ಉಡುಪಿ ನಗರಸಭಾ ಸದಸ್ಯರು ಉಪಸ್ಥಿತರಿದ್ದರು