ಉಡುಪಿ: ಕರಾವಳಿ ಕರ್ನಾಟಕ ಭಾಗದಲ್ಲಿ ಜೂನ್ 29 ರಿಂದ ಜುಲೈ 3 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಶನಿವಾರದ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಜೂನ್ 29, ಗುರುವಾರದಂದು ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಅತಿ ಹೆಚ್ಚುಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 40-45 ಕಿಮೀ ವೇಗದಲ್ಲಿ ಮತ್ತು ಹೊರಗೆ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆ ಅಂಕಿಅಂಶಗಳ ಪ್ರಕಾರ, ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಿಗ್ಗೆ 8.30 ರ ನಡುವೆ ಕಾರವಾರದಲ್ಲಿ ಅತಿ ಹೆಚ್ಚು ಅಂದರೆ 158.3 ಮಿಮೀ, ಮಂಗಳೂರಿನಲ್ಲಿ 141.7 ಮಿಮೀ ಮತ್ತು ಗೋಕರ್ಣದಲ್ಲಿ 114.8 ಮಿಮೀ ಮಳೆಯಾಗಿದೆ.