ಉಡುಪಿ : ವಿಧಾನಸಭಾ ಅಧಿವೇಶನದಲ್ಲಿ ಫಲಾನುಭವಿಗಳಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಖಾತೆಗೆ ವರ್ಗಾವಣೆ ಮಾಡಿರುವುದಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡುವಂತೆ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಗ್ರಹಿಸಿದ್ದಾರೆ.
ಓರ್ವ ಜವಾಬ್ದಾರಿಯುತ ಸಚಿವರಾಗಿ ಸದನದಲ್ಲಿ ತಪ್ಪು ಮಾಹಿತಿ ನೀಡಿರುವುದು ಅಕ್ಷಮ್ಯ ಅಪರಾಧವಾಗಿದೆ. ರಾಜ್ಯದ ಮಹಿಳೆಯರ ಬಗ್ಗೆ ವಿಪರೀತ ಕಾಳಜಿ ತೋರುವ ಪ್ರಹಸನ ಮಾಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಬಗ್ಗೆ ಸದನದಲ್ಲಿ ತಪ್ಪು ಮಾಹಿತಿ ನೀಡುವ ಮೂಲಕ ಸಚಿವೆ ರಾಜ್ಯದ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಪೊಳ್ಳು ಭರವಸೆಯ ಮೂಲಕವೇ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರ ಇದೀಗ ಈ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡಲು ವಿಫಲವಾಗಿ ಪ್ರಜಾ ಪ್ರಭುತ್ವದ ದೇಗುಲದಲ್ಲಿ ಸುಳ್ಳು ಮಾಹಿತಿಯನ್ನು ನೀಡುವ ಹಂತಕ್ಕೆ ಬಂದಿದ್ದು ವಿಪರ್ಯಾಸ.
ಉಡುಪಿಯ ಪ್ರಸಾದ್ ಕಾಂಚನ್ ದಿನ ಬೆಳಗಾದರೆ ಉಡುಪಿ ಶಾಸಕರ ವಿರುದ್ಧ ಬೇಜವಾಬ್ದಾರಿ ಹೇಳಿಕೆಯನ್ನು ನೀಡುತ್ತಾ ಜನತೆಯ ಕಿವಿಗೆ ಹೂ ಇಡಲು ಪ್ರಯತ್ನಿಸುವ ಬದಲು ರಾಜ್ಯದ ಜನತೆಗೆ ಸರಕಾರದ ಯೋಜನೆಯ ಬಗ್ಗೆ ತಪ್ಪು ಮಾಹಿತಿ ನೀಡಿರುವ ಉಡುಪಿ ಜಿಲ್ಲೆಗೆ ಅತಿಥಿಯಂತಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರಬುದ್ಧತೆಯನ್ನು ಮೆರೆಯಲಿ ಎಂದು ಸಂಧ್ಯಾ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

