ಬೆಂಗಳೂರು : ರೇಣುಕಾಸ್ವಾಮಿ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಕಳೆದ 4 ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ
ಇಬ್ಬರೂ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ವಜಾಗೊಳಿಸಿ ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜೈ ಶಂಕರ್ ಅವರು ಸೋಮವಾರ ಆದೇಶಿಸಿದ್ದಾರೆ. ಜೊತೆಗೆ, ಪ್ರಕರಣದಲ್ಲಿ ಸಹ ಆರೋಪಿಗಳಾಗಿರುವ ದರ್ಶನ್ ಕಾರು ಚಾಲಕ ಲಕ್ಷ್ಮಣ್ (ಆರೋಪಿ-12) ಹಾಗೂ ಮ್ಯಾನೇಜರ್ ನಾಗರಾಜ್ (ಆರೋಪಿ-11) ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಅಪರಾಧಿಕ ಒಳಸಂಚು ನಡೆಸಿ ರೇಣುಕಾಸ್ವಾಮಿಯನ್ನು ಅಪಹರಿಸಿರುವುದು, ಪಟ್ಟಣಗೆರೆ ಶೆಡ್‌ನಲ್ಲಿ ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದರಲ್ಲಿ ಪವಿತ್ರಾ ಗೌಡ, ದರ್ಶನ್, ಲಕ್ಷ್ಮಣ್ ಮತ್ತು ನಾಗರಾಜು ಅವರ ಪಾತ್ರವಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದರಿಂದ ಅವರು ಜಾಮೀನು ಪಡೆಯಲು ಯೋಗ್ಯರಾಗಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ