ಮಂಗಳೂರು : ನಗರದ ಕಾಲೇಜು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಮೂಲತಃ ಬೀದರ್ ಪ್ರಸಕ್ತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿರುವ ಪ್ರಜ್ವಲ್ ಪೀಣ್ಯಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಾದಕ ವಸ್ತು ಪೂರೈಕೆಗೆ ಸಂಬಂಧಿಸಿದಂತೆ ಈಗಾಗಲೆ ನಗರ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು 9 ಮಂದಿಯನ್ನು ಬಂಧಿಸಲಾಗಿತ್ತು. ಪ್ರಜ್ವಲ್ ಪೀಣ್ಯಾಸ್ ನನ್ನು ಬಂಧಿಸುವ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಿದಂತಾಗಿದೆ. ಈತ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಾದಕ ವಸ್ತುವನ್ನು ಪಡೆದುಕೊಂಡು ನಗರಕ್ಕೆ ಪೂರೈಕೆ ಮಾಡುತ್ತಿದ್ದ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನಿಂದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಪಡಿಸಲಾಗಿದೆ.
ಆರೋಪಿಯು ಈ ಹಿಂದೆ ನಗರದ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಈತನ ವಿರುದ್ಧ ಈಗಾಗಲೆ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ

