ಕುಂದಾಪುರ : ವಿದ್ಯಾರ್ಥಿಗಳು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಂಡಾಗ ಮಾತ್ರ ಬದುಕು ಪರಿಪೂರ್ಣವಾಗಲು ಸಾಧ್ಯ. ಆಲಿಸುವಿಕೆ, ಓದು, ನೋಡುವ ಆಸಕ್ತಿ ಈ ಕೌಶಲಗಳನ್ನು ಬೆಳೆಸಿಕೊಂಡಾಗ ಬರವಣಿಗೆ ಕೌಶಲ ಸಾಧ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗವು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಡಾ| ಶಿವರಾಮ ಕಾರಂತ ಪ್ರತಿಷ್ಠಾನ – ಕಾರಂತ ಥೀಮ್ ಪಾರ್ಕ್, ಕೋಟ ಇವರ ಸಹಯೋಗದೊಂದಿಗೆ ಸಾಹಿತ್ಯಾಸಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಬರವಣಿಗೆ ಕೌಶಲ’ ಎನ್ನುವ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಸಮಾರೋಪ ನುಡಿಗಳನ್ನಾಡಿದರು.
ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯದರ್ಶಿ ಶ್ರೀ ದಿನಕರ್ ಆರ್. ಶೆಟ್ಟಿ ಆಶಯ ನುಡಿಗಳನ್ನಾಡಿದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯದರ್ಶಿ ಶ್ರೀಮತಿ ಅಕ್ಷತಾ ಗಿರೀಶ್, ಕೋಶಾಧಿಕಾರಿ ಶ್ರೀ ಕೆ.ಎಸ್. ಮಂಜುನಾಥ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕಿ ಶ್ರೀಮತಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಪ್ರವೀಣಾ ಎಮ್. ಪೂಜಾರಿ ವಂದಿಸಿ, ರಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

