ಕೋಟೇಶ್ವರ : “ಇಂದಿನ ವಿದ್ಯಾರ್ಥಿಗಳು ತಾಂತ್ರಿಕತೆಯಲ್ಲಿ ಸಾಕಷ್ಟು ಪ್ರಾವೀಣ್ಯತೆಯನ್ನು ಹೊಂದಿದ್ದು, ಅವರುಗಳು ತಮ್ಮ ವಿದ್ಯಾಭ್ಯಾಸದಲ್ಲಿ ಈ ತಾಂತ್ರಿಕತೆಯನ್ನು ಅಳವಡಿಸಿಕೊಂಡಾಗ ಸಾಕಷ್ಟು ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತದೆ. ಆದುದರಿಂದ ವಿದ್ಯಾರ್ಥಿಗಳು ಬೇರೆ ಬೇರೆ ದೃಷ್ಟಿಕೋನಗಳಿಂದ ಯೋಚಿಸುವುದರಿಂದ ಸಾಕಷ್ಟು ಅವಕಾಶಗಳನ್ನು ಸೃಷ್ಟಿಸಿಕೊಳ್ಳಲು ಸಾದ್ಯವಾಗುತ್ತದೆ” ಎಂದು ಭಂಡಾರಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಗ್ರಂಥಪಾಲಕರಾದ ಮನೋಹರ ನಾಗಪ್ಪಯ್ಯ ಇವರು ತಿಳಿಸಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇಲ್ಲಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಗ್ರಂಥಾಲಯ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಆಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್ ನಾಯಕ ಇವರು ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಗ್ರಂಥಾಲಯದಲ್ಲಿರುವ ಸಂಪನ್ಮೂಲಗಳನ್ನು ಹಾಗು ಸೌಕರ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರಿಂದ ಹೆಚ್ಚಿನ ಜ್ಞಾನಾರ್ಜನೆ ಹೊಂದಲು ಸಹಕಾರಿಯಾಗುತ್ತದೆ. ತನ್ಮೂಲಕವಾಗಿ ಉತ್ತಮ ಹುದ್ದೆಗಳನ್ನು ತಮ್ಮದಾಗಿಸಿಕೊಳ್ಳುವುದರ ಜೊತೆಗೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಬಹುದೆಂದು ಅಭಿಪ್ರಾಯ ಪಟ್ಟರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ರಾಮರಾಯ ಆಚಾರ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸ್ಪೂರ್ತಿಅಂತಿಮ ಬಿ.ಕಾಂ. ಇವರ ಪ್ರಾರ್ಥನೆಯೊಂದಿಗೆ ಪ್ರಾರಂಬಿಸಲಾಯಿತು. ಗ್ರಂಥಪಾಲಕರಾದ ವೆಟರನ್ ರವಿಚಂದ್ರ ಹೆಚ್.ಎಸ್. ಅತಿಥಿಗಳನ್ನು ಸ್ವಾಗತಿಸಿದರು. ಸಂತೋಷ ನಾಯ್ಕ ಹೆಚ್, ವಂದಿಸಿದರು. ದಿವ್ಯ . ಕಾರ್ಯಕ್ರಮ ನಿರೂಪಿಸಿದರು. ಕಾರ್ತಿಕ. ತಾಂತ್ರಿಕ ನೆರವು ನೀಡಿದರು.