ಕುಂದಾಪುರ : ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ ಕಾಲೇಜಿನ ಐಕ್ಯೂಎಸಿ, ಎನ್.ಎಸ್.ಎಸ್., ಎನ್.ಸಿ.ಸಿ., ರೆಡ್ ಕ್ರಾಸ್, ರೋವರ್ ರೇಂಜರ್ಸ್ ಮತ್ತು ಮಾನವ ಹಕ್ಕು ಘಟಕ ಆಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಓದುವುದರ ಮೂಲಕ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಂಕರನಾರಾಯಣ ಸರ್ಕಾರಿ ಪ.ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ದಿನೇಶ ನಾಯ್ಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಭಾರತ ವಿಶ್ವದಲ್ಲಿಯೇ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ತನ್ನದೇ ಆದ ಸಂವಿಧಾನವನ್ನು ಅಳವಡಿಸಿಕೊಳ್ಳುವುದರ ಮೂಲಕ ಸಂವಿಧಾನ ಪೀಠಿಕೆಯಲ್ಲಿನ ಮೂಲ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಭಾತೃತ್ವ, ಜಾತ್ಯಾತೀತ ಪರಿಕಲ್ಪನೆಯನ್ನು ವಿವರವಾಗಿ ತಿಳಿಸಿದರು. ಐಕ್ಯೂಎಸಿ ಸಂಯೋಜಕರಾದ ಪುರುಷೋತ್ತಮ ಬಲ್ಯಾಯ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಶಾ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಡಾ. ವಿಶ್ವನಾಥ ಆಚಾರ್ಯ ವಂದಿಸಿದರು.