ಹೊಸದಿಲ್ಲಿ ; ಬ್ರಿಟನ್ ನೂತನ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಪ್ರಸ್ತಾಪ ಮಾಡಿದ್ದು, ಉಭಯ ನಾಯಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೇ ವೇಳೆ ಸ್ಟಾರ್ಮರ್ ಗೆ ಭಾರತಕ್ಕೆ ಭೇಟಿ ನೀಡುವಂತೆ ಮೋದಿ ಆಹ್ವಾನ ಕೊಟ್ಟಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ಅವರ ಲೇಬರ್ ಪಕ್ಷ ಜಯಭೇರಿ ಮತ್ತು ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಮೋದಿ ಅಭಿನಂದಿಸಿದ್ದು, ಉಭಯ ನಾಯಕರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಸಂಬಂಧಗಳನ್ನು ನೆನಪಿಸಿಕೊಂಡಿದ್ದಾರೆ. ಎರಡೂ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಈ ಕುರಿತು” ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಸ್ಟಾರ್ಮರ್ ಅವರೊಂದಿಗೆ ಮಾತನಾಡಿದ್ದು ಸಂತೋಷವಾಗಿದೆ. ಯುಕೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕೆ ಅವರನ್ನು ಅಭಿನಂದಿಸಿದ್ದೇನೆ. ನಮ್ಮ ಜನರ ಪ್ರಗತಿ ಸಮೃದ್ಧಿ ಮತ್ತು ಜಾಗತಿಕ ಒಳಿತಿಗಾಗಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಮತ್ತು ದೃಢವಾದ ಭಾರತ-ಯುಕೆ ಆರ್ಥಿಕ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸಲು ನಾವು ಬದ್ಧವಾಗಿದ್ದೇವೆ ಎಂದು ತಿಳಿಸಿದ್ದಾರೆ.