ಹೊಸದಿಲ್ಲಿ: ಮಾಜಿ ಪ್ರಧಾನಿ ಆರ್ಥಿಕ ಉದಾರೀಕರಣದ ಶಿಲ್ಪಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದಿಲ್ಲಿಯಲ್ಲಿಇಂದು ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಶನಿವಾರ ಬೆಳಗ್ಗೆ 9.30ಕ್ಕೆ ಕಾಂಗ್ರೆಸ್ ಕೇಂದ್ರ ಕಚೇರಿಯಿಂದ ದಿವಂಗತ ಸಿಂಗ್ ಅವರ ಅಂತಿಮ ಯಾತ್ರೆ ಆರಂಭವಾಗಲಿದೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಅವರಿಗೆ ಅವರ ಹೊಸದಿಲ್ಲಿ ನಿವಾಸದಲ್ಲಿ ಶುಕ್ರವಾರ ರಾಷ್ಟ್ರಪತಿ ಬ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಧನ್ಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅಂತಿಮ ಗೌರವ ನಮನ ಸಲ್ಲಿಸಿದರು. ಜತೆಗೆ ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ.ನಡ್ಡಾ ಜ್ಯೋತಿರಾದಿತ್ಯ ಸಿಂಧಿಯಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ, ಸಂಸದರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಸೇರಿ ಮತ್ತಿತರ ನಾಯಕರು ಡಾ.ಸಿಂಗ್ ಅವರಿಗೆ ಪುಷ್ಪನಮನ ಸಲ್ಲಿಸಿದರು.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ, ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿತು.
ಜ. 01 ರವರೆಗೆ ಶೋಕಾಚರಣೆ,
ಇಂದು ಅರ್ಧ ದಿನ ರಜೆ
ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ಕೇಂದ್ರ, ಜನವರಿ 1 ರವರೆಗೆ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದೆ. ಈ ಸಮಯದಲ್ಲಿ ರಾಷ್ಟ್ರದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸ ಲಾಗುತ್ತದೆ. ಜತೆಗೆ ಎಲ್ಲ ಭಾರತೀಯ ಮಿಷನ್ ಗಳು ಮತ್ತು ಹೈಕಮಿಷನ್‌ಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಎಲ್ಲ ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಶನಿವಾರ ಅರ್ಧ ದಿನ ರಜೆ ಘೋಷಿಸಲಾಗಿದೆ.