ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ನಡೆಯುತ್ತಿದೆ. ಇಂದು ದೇಶದಲ್ಲಿ ಕೃಷಿ ಕ್ಷೇತ್ರದ ಕ್ರಾಂತಿಯಾಗಿದೆ. ದೇಶದ ಜನರಿಗೆ ಸಾಕಾಗುವಷ್ಟು ಅಕ್ಕಿ ಧವಸ ಧಾನ್ಯ ಉತ್ಪಾದನೆಯಾಗುತ್ತಿದೆ. ರೈತರು ಸಶಕ್ತರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಅವರು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು
ಯೋಜನೆಯ ಕಾರ್ಯವೈಖರಿಗೆ ಶ್ಲಾಘನೆ
ಗ್ರಾಮಾಭಿವೃದ್ಧಿ ಯೋಜನೆಯಿಂದ ಫಲ ಪಡೆದು ಲಾಭಾಂಶವನ್ನು ಸ್ವೀಕರಿಸಿರುವ ಎಲ್ಲರಿಗೂ ವಂದನೆಗಳು. ಇಂಥ ಕಾರ್ಯಕ್ರಮಗಳಿಂದ ಇಂದು ಮಹಿಳೆಯರು ಸ್ವಯಂ ಗೌರವದಿಂದ ನಾವೂ ದುಡಿಯುತ್ತಿದ್ದೇವೆ ಎಂದು ಹೇಳಬಹುದಾಗಿದೆ. ನೀವು ಕೊಡುವ ಹಣ ಲಾಭದ ರೂಪದಲ್ಲಿ ಗೌರವಪೂರ್ವಕವಾಗಿ ನಿಮಗೆ ವಾಪಸ್ ಬಂದಿದೆ. ಗ್ರಾಮೀಣ ಅಭಿವೃದ್ಧಿಗೆ ಜನರ ಹಣ ಬಳಕೆಯಾಗುತ್ತಿದೆ. ಕೋವಿಡ್ ಸಮಯದಲ್ಲಿ ಆತ್ಮನಿರ್ಭರ್ ಭಾರತ್ ಘೋಷಣೆ ಮಾಡಿದ ಬಳಿಕ 5 ಮಿನಿ ಬಜೆಟ್ ಗಳನ್ನು ರಾಷ್ಟ್ರಕ್ಕೆ ಅರ್ಪಿಸಿದ್ದೇವೆ.