ಮುಂಬೈ : ದೇವೇಂದ್ರ ಫಡ್ನವೀಸ್ ಗುರುವಾರ ಸಂಜೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ದಕ್ಷಿಣ ಮುಂಬೈನ ವಿಶಾಲವಾದ ಆಜಾದ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ನಾಯಕರಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು
ನಾಗಪುರ ನೈಋತ್ಯ ಕ್ಷೇತ್ರದಿಂದ ಆಯ್ಕೆಯಾದ ಫಡ್ನವೀಸ್(54 ವರ್ಷ), ಶಿಂಧೆ (60 ವರ್ಷ) ಮತ್ತು ಅಜಿತ್ ಪವಾರ್ (65ವರ್ಷ) ಅವರಿಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಸಚಿವರಾಗಿ ಯಾರೊಬ್ಬರೂ ಪ್ರಮಾಣ ವಚನ ಸ್ವೀಕರಿಸಲಿಲ್ಲ.
ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಮಂತ್ರಿಮಂಡಲ ವಿಸ್ತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ