ಕುಂದಾಪುರ : ಇತಿಹಾಸ ಪ್ರಸಿದ್ದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವವು ಸಂಪನ್ನಗೊಂಡಿತು. ಶನಿವಾರ ವೈಭವದಿಂದ ಶ್ರೀ ದೇವಿಯ ವಿಜೃಂಭಣೆಯ ಉತ್ಸವಕ್ಕೆ ಆಸು-ಪಾಸಿನ ಗ್ರಾಮಗಳಿಂದ, ರಾಜ್ಯದ ವಿವಿಧ ಭಾಗಗಳಿಂದ, ಹೊರ ರಾಜ್ಯದಿಂದ ಹಾಗೂ ವಿದೇಶದಿಂದ ಬಂದಿದ್ದ ದೊಡ್ಡ ಸಂಖ್ಯೆಯ ಭಕ್ತರು ಸಾಕ್ಷಿಯಾದರು.
ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ದೇಗುಲದ ಪ್ರಧಾನ ತಂತ್ರಿ ನಿತ್ಯಾನಂದ ಅಡಿಗ ನೇತೃತ್ವದಲ್ಲಿ ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗಿತ್ತು. ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ ಮಧ್ಯಾಹ್ನ 12.30ರ ವೇಳೆಗೆ ಜೋಡಿ ಉತ್ಸವ ಮೂರ್ತಿಗಳನ್ನು ಗರ್ಭಗುಡಿಯಿಂದ ಹೊರತಂದು, ಸುತ್ತು ಪೌಳಿಯಲ್ಲಿ ಮೂರು ಸುತ್ತು ಉತ್ಸವ ನಡೆಸಿ, ಬಳಿಕ ಓಡು ಬಲಿ ಸೇವೆಗಾಗಿ ಸೌಪರ್ಣಿಕ ನದಿ ತೀರಕ್ಕೆ ಉತ್ಸವ ಮೂರ್ತಿಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ಕೊಲ್ಲೂರಿನ ರಥೋತ್ಸವದ ಪರಂಪರೆಯಂತೆ ಗರ್ಭಗುಡಿಯಿಂದ ತರಲಾದ ಜೋಡಿ (ಎರಡು) ಉತ್ಸವ ಮೂರ್ತಿಗಳನ್ನು ಬ್ರಹ್ಮರಥದಲ್ಲಿ ಕುಳ್ಳಿರಿಸಿ ರಥ ಪೂಜೆ ನಡೆಸಿದ ಬಳಿಕ, ಸಾವಿರಾರು ಭಕ್ತರ ಜಯಘೋಷದ ನಡುವೆ, ಬೀದಿ ಗಣಪತಿ ದೇವಸ್ಥಾನದವರೆಗೆ ರಥೋತ್ಸವ ನಡೆಸಲಾಯಿತು.
ಸಂಜೆ 5.00 ಗಂಟೆಯ ಬಳಿಕ ಬ್ರಹ್ಮರಥದಲ್ಲಿ ದೇವರನ್ನು ಕೂರಿಸಿ ರಥಬೀದಿಯಲ್ಲಿ ಶಂಕರಾಶ್ರಮದವರೆಗೆ ಬ್ರಹ್ಮರಥ ಕೊಂಡೊಯ್ಯಲಾಯಿತು. ವಾರ್ಷಿಕ ಜಾತ್ರೆಯ ತೇರಿನ ವೈಭವಕ್ಕೆ ದೇಶ-ವಿದೇಶದಿಂದ ಬಂದಿದ್ದ ಸಾವಿರಾರು ಭಕ್ತರು ಸಾಕ್ಷಿಯಾದರು. ಪರಂಪರೆಯಂತೆ ರಥಬೀದಿಯ ಸಂಭ್ರಮದ ಉತ್ಸವಾಚರಣೆಯ ಬಳಿಕ ಶ್ರೀ ದೇವರನ್ನು ರಥದಿಂದ ಇಳಿಸಿ ದೇವಸ್ಥಾನದ ಒಳಗೆ ಕೊಂಡೊಯ್ಯಲಾಯಿತು.
ದೇವಸ್ಥಾನದ ಋತ್ವಿಜರಾದ ಶ್ರೀಧರ ಅಡಿಗ, ಕೆ.ಎನ್. ಗೋವಿಂದ ಅಡಿಗ, ರಾಮಚಂದ್ರ ಅಡಿಗ, ಸುಬ್ರಹ್ಮಣ್ಯ ಅಡಿಗ, ವಿಶ್ವೇಶ್ ಅಡಿಗ, ಗಜಾನನ ಜೋಯಿಸ್, ಸುದರ್ಶನ್ ಜೋಯಿಸ್, ಕಾಳಿದಾಸ ಭಟ್, ಸುರೇಶ್ ಭಟ್, ಶಿವಾನಂದ ಜೋಯಿಸ್, ಅಶ್ವಿನ್ ಭಟ್ ಇದ್ದರು
ಸಂಜೆ ನಡೆದ ವೈಭವದ ರಥೋತ್ಸವದಲ್ಲಿ ಚೆಂಡೆ ವಾದನ, ತಟ್ಟಿರಾಯ ಸೇರಿದಂತೆ ವಿವಿಧ ಸಾಂಸ್ಕೃತಿಕ ತಂಡಗಳು ಭಾಗವಹಿಸಿದ್ದವು. ದೇವಸ್ಥಾನದ ಹೊರ ಹಾಗೂ ಒಳಾವರಣವನ್ನು ಹೂವು ಹಾಗೂ ಹಣ್ಣುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ಮಾ.15ರಂದು ಗಣಪತಿ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಶ್ರೀ ಕ್ಷೇತ್ರದ ವಾರ್ಷಿಕ ಉತ್ಸವಾಚರಣೆಯ ಅಂಗವಾಗಿ ಪ್ರತಿ ದಿನವೂ ವಿಶೇಷ ಉತ್ಸವಗಳನ್ನು ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ ಶೆಟ್ಟಿ, ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಉಪ ವಿಭಾಗಾಧಿಕಾರಿ ಕೆ.ಮಹೇಶ್ಚಂದ್ರ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಾಜೇಶ್ ಕಾರಂತ್ ಮುಂತಾದವರು ಉಪಸ್ಥಿತರಿದ್ದರು

