ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣವಿದೇಶದಿಂದ ಮರಳುತ್ತಿದ್ದಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಬಂಧಿಸಿದ್ದ ವಿಶೇಷ ತನಿಖಾ ದಳವು (ಎಸ್‌ಐಟಿ) ಶುಕ್ರವಾರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಆರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದೆ
ಜರ್ಮನಿಯ ಮ್ಯೂನಿಕ್ ನಗರದಿಂದ ಬಂದಿಳಿದ ಕೂಡಲೇ ಕೆಐಎನಲ್ಲಿ ಬಂಧನವಾಗಿದ್ದ ಪ್ರಜ್ವಲ್ ಅವರನ್ನು ಶುಕ್ರವಾರ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಬಳಿಕ ಅತ್ಯಾಚಾರ ಪ್ರಕರಣಗಳ ತನಿಖೆಗೆ 15 ದಿನಗಳು ತಮ್ಮ ವಶಕ್ಕೆ ನೀಡುವಂತೆ ಎಸ್‌ಐಟಿ ವಕೀಲರು ಮನವಿ ಮಾಡಿದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ವಾದ-ಪ್ರತಿವಾದ ಆಲಿಸಿ ಕೊನೆಗೆ ಆರು ದಿನ ಎಸ್‌ಐಟಿ ವಶಕ್ಕೆ ನೀಡಿ ಆದೇಶಿಸಿತು.