ಬೆಂಗಳೂರು : ಕೋಟ್ಯಂತರ ರುಪಾಯಿ ಹಣ ವರ್ಗಾವಣೆ ಕಾರಣ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿಟ್ಟಿರುವ ಡೆತ್ ನೋಟ್ನಲ್ಲಿ ‘ಸಚಿವರ ಮೌಖಿಕ ಸೂಚನೆ ಮೇರೆಗೆ ಹಣ ವರ್ಗ’ ಎಂಬ ಉಲ್ಲೇಖ ಇರುವುದರಿಂದ ಬಿಜೆಪಿ ಸೇರಿದಂತೆ ಪ್ರತಿ ಪಕ್ಷಗಳು ಸಚಿವರ ರಾಜೀನಾಮೆಗೆ ಒತ್ತಾಯ ಮಾಡಲಾರಂಭಿಸಿವೆ.
ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಡೆತ್ ನೋಟ್ ಬರೆದಿಟ್ಟಿದ್ದು, ತಮ್ಮ ಆತ್ಮಹತ್ಯೆಗೆ ಸಚಿವರೂ ಕಾರಣ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮವು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರಲಿದ್ದು, ಆ ಇಲಾಖೆಯ ಸಚಿವರಾಗಿರುವ ಬಿ. ನಾಗೇಂದ್ರ ಅವರನ್ನೇ ದೃಷ್ಟಿಯಲ್ಲಿಟ್ಟುಕೊಂಡು ಡೆತ್ ನೋಟ್ನಲ್ಲಿ ಸಚಿವರು ಎಂದು ಉಲ್ಲೇಖಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದಾರೆ. ಅಲ್ಲದೆ, ಪ್ರಕರಣವನ್ನು ಮಾಜಿ ಸಚಿವ. ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆ ಪ್ರಕರಣಕ್ಕೆ ಹೋಲಿಕೆ ಮಾಡುತ್ತಿರುವ ವಿರೋಧ ಪಕ್ಷದ ನಾಯಕರು, ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.