ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ. ಸೋಮವಾರ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ವೈದ್ಯರ ವರದಿಯನ್ನು ಪರಿಶೀಲಿಸಿದ ಪೀಠವು ಫಿಸಿಯೋಥೆರಪಿ ಮತ್ತು ಬೆನ್ನುಹುರಿ ನೋವಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದೆ. ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದು ವೈದ್ಯಕೀಯ ವರದಿಯಲ್ಲಿದೆ ಎಂದು ವಿವರಿಸಿತು. ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದು, ವಿಜಯನಗರ ವೈದ್ಯಕೀಯ ಸಂಸ್ಥೆಯು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಹೇಳಿದೆ. ಶಸ್ತ್ರಚಿಕಿತ್ಸೆ ಮಾಡದಿದ್ದರೆ ಮೂತ್ರಪಿಂಡ ಸೇರಿದಂತೆ ಮತ್ತಿತರ ಅಂಗಾಂಗಳಿಗೆ ಸಮಸ್ಯೆಯಾಗಲಿದೆ. ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ಸರ್ಕಾರದ ಪರ ವಿಶೇಷ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ವಾದ. ಮಂಡಿಸಿ, ವೈದ್ಯಕೀಯ ವರದಿಯ ಪ್ರತಿಯನ್ನು ನಮಗೆ ನೀಡಬೇಕು. ಅದನ್ನು ಪರಿಶೀಲಿಸಿ, ಅಗತ್ಯಬಿದ್ದರೆ ಆಕ್ಷೇಪಣೆ ಸಲ್ಲಿಸಲಾಗುವುದು ಎಂದರು. ವಾದ-ಪ್ರತಿವಾದ ಆಲಿಸಿದ ಪೀಠವು, ವೈದ್ಯಕೀಯ ವರದಿಯ ಪ್ರತಿಯನ್ನು ವಿಶೇಷ ಸರ್ಕಾರಿ ಅಭಿಯೋಜಕರಿಗೆ ನೀಡಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.
Categories
ದರ್ಶನ್ ಜಾಮೀನು ಅರ್ಜಿ ಇಂದು ಮತ್ತೆ ವಿಚಾರಣೆ