ಬೆಂಗಳೂರು : ಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಸಿಎಂ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕ್ರಮ ಖಂಡಿಸಿ ಬಿಜೆಪಿ ಕಾಯಕರ್ತರು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆದವು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ವಿರಮಿಸಲ್ಲ ಎಂದು ಶಪಥಗೈದರು. ಸಿದ್ದರಾಮಯ್ಯಗೆ ತಾಕತ್ತಿದ್ದರೆ ಮುಡಾ ಸೇರಿ ಎಲ್ಲಾ ಹಗರಣಗಳ ‘ತನಿಖೆ ಸಿಬಿಐಗೆ ಕೊಡಲಿ ಎಂದು ಆಗ್ರಹಿಸಿದರು.
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪರಿಷತ್‌ನ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಅಶ್ವತ್ಥನಾರಾಯಣ, ಪರಿಷತ್ ಸದಸ್ಯ ಎನ್.ರವಿ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.