ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ನಗರದ ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಪಕ್ಷ ನಾಯಕರಾದ ಆರ್. ಅಶೋಕ ಮತ್ತು ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಮುಂತಾದವರು ಬಸ್ಸಿನಲ್ಲಿದ್ದ ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಕ್ಷಮೆ ಯಾಚಿಸಿದರು. ಕೆಲ ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ ಮುಖವಾಡ ಧರಿಸಿದ್ದರು.
ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರ ಬಳಿ ಹೋದ ಬಿಜೆಪಿ ನಾಯಕರು, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡುವುದಿಲ್ಲವೆಂದು ನೀವು ಮತ ನೀಡಿದ್ದೀರಿ, ಆದರೆ ಮಾತಿಗೆ ತಪ್ಪಿದ ಸರ್ಕಾರ ಹೊಸ ವರ್ಷದಂದೇ ಟಿಕೆಟ್ ದರ ಏರಿಕೆ ಮಾಡಿದೆ ಎಂದರು