ಬೆಂಗಳೂರು : ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದು, ಸಚಿವ ಬಿ.ನಾಗೇಂದ್ರ ಜೊತೆ ಅವರೂ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಬಿ.ನಾಗೇಂದ್ರ ಈ ಪ್ರಕರಣದಲ್ಲಿ ಸಣ್ಣ ಆರೋಪಿ. ಇದಕ್ಕೂ ದೊಡ್ಡ ಆರೋಪಿಗಳು ಇದರ ಹಿಂದೆ ಇದ್ದಾರೆ. ಈ ಎಲ್ಲ ಸತ್ಯ ಹೊರಬರಲು ಪ್ರಕರಣವನ್ನು ಸಿಬಿಐಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು. ಅಕ್ರಮದ ಹಣ ಸಚಿವರೊಬ್ಬರೇ ನುಂಗಿಲ್ಲ. ಇದರಲ್ಲಿ ಇಡೀ ಸಚಿವ ಸಂಪುಟ ಶಾಮೀಲಾಗಿದ್ದು, ಹಣ ಹೈದರಾಬಾದ್‌ಗೆ ಹೋಗಿ ನಂತರ ದಿಲ್ಲಿಗೆ ತಲುಪಿದೆ. ನನ್ನ ಬುಡಕ್ಕೆ ಬಂದುಬಿಡುತ್ತದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಸಿಬಿಐ ತನಿಖೆ ಮಾಡಿಸಲು ಒಪ್ಪುತ್ತಿಲ್ಲ ರಾಹುಲ್ ಗಾಂಧಿ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಇದಕ್ಕೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.