ಬೆಂಗಳೂರು : ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಸೈಟ್ ಹಂಚಿಕೆ ಹಗರಣ ಸಂಬಂಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸೋಮವಾರ ಪ್ರತಿಭಟನೆ ನಡೆಸಲಿವೆ.
ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಬೆಳಗ್ಗೆ 11.30ಕ್ಕೆ ಪ್ರತಿಭಟನೆ ನಡೆಯಲಿದೆ. ಉಭಯ ಪಕ್ಷಗಳ ಶಾಸಕರು, ಮುಖಂಡರುಪಾಲ್ಗೊಳ್ಳಲಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ಸಿನ ನಡಿಗೆ ಭ್ರಷ್ಟಾಚಾರದ ಕಡೆಗೆ ಎಂಬಂತಾಗಿದೆ. ಈ ಸರ್ಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರ್ಕಾರ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 65 ಪ್ರಕರಣಗಳಿದ್ದು ಅದನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಆದ್ದರಿಂದ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಸ್ಪಷ್ಟಪಡಿಸಿದರು.