ಅಂಕೋಲಾ : ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ಅಸಡ್ಡೆ ಮಾಡಿಲ್ಲ. ಎಸ್ಡಿಆರ್ಎಫ್ನಿಂದ 46 ಸಿಬ್ಬಂದಿ, 44 ಸೇನಾ ಯೋಧರು ಹಾಗೂ ನೌಕಾಪಡೆಯವರು ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಭಾನುವಾರ ದುರಂತ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನದ ಕಾರಣ ಭೇಟಿ ವಿಳಂಬವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಕ್ಕೆ ಸೂಚಿಸಿದ್ದೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗಿದ್ದು, ಎಲ್ಲ ರೀತಿಯ ಸೌಲಭ್ಯಕ್ಕೆ ಸರ್ಕಾರ ಬದ್ಧವಿದೆ ಎಂದರು. ಭೂ ಕುಸಿತ ಹಿನ್ನೆಲೆಯಲ್ಲಿ ಯಾರೇ ತಪ್ಪು ಮಾಡಿದರೂ ಕೂಡ ಅವರ ಮೇಲೆ ಕ್ರಮ ವಹಿಸಲಾಗುವುದು. ರಸ್ತೆ ನಿರ್ಮಾಣ ಮಾಡಿರುವವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು. ಪರಿಹಾರ ಕಾಮಗಾರಿ ಮುಗಿದ ಮೇಲೆ ಪ್ರಕರಣದ ಬಗ್ಗೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು
ವಿಳಂಬ ಮಾಡಿಲ್ಲ ;
ಕೇರಳದ ಲಾರಿ ఇల్లి ಸಿಕ್ಕಿಹಾಕಿಕೊಂಡಿರುವುದರಿಂದ ಕೇರಳ ಪೊಲೀಸರು ಹಾಗೂ ಮಾಧ್ಯಮದವರು ರಾಜ್ಯ ಸರ್ಕಾರ ವಿಳಂಬ ಕಾರ್ಯಾಚರಣೆ ಮಾಡುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ, ರಾಜ್ಯ ಸರ್ಕಾರ ಯಾವುದನ್ನೂ ವಿಳಂಬ ಮಾಡಿಲ್ಲ. ಎಲ್ಲವನ್ನೂ ತ್ವರಿತವಾಗಿ ಮಾಡುತ್ತಿದ್ದೇವೆ ಎಂದರು. ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ ಸೈಲ್, ಭೀಮಣ್ಣ ನಾಯ್ಕ ವಿವಿಧ ಇಲಾಖೆಗಳ ರಾಜ್ಯ ಕಾರ್ಯದರ್ಶಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.