ಬಳ್ಳಾರಿ : ಕೋರ್ ಕಮಿಟಿ ಸಭೆಯಲ್ಲಿನ ಆರೋಪ ಮತ್ತು ಶಾಸಕ ಜನಾರ್ದನ ರೆಡ್ಡಿ ಜತೆ ಮುನಿಸಿಕೊಂಡಿರುವ ಮಾಜಿ ಸಚಿವ ಬಿ. ಶ್ರೀರಾಮುಲುಗೆ ಬೆಳವಣಿಗೆಯೊಂದರಲ್ಲಿ ದೆಹಲಿಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ. ಹೀಗಾಗಿ ಶ್ರೀರಾಮುಲು ಅವರು ದೆಹಲಿಗೆ ಯಾವಾಗ ತೆರಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಸಭೆಯಲ್ಲಿ ಸಂಡೂರು ಉಪ ಚುನಾವಣೆ ಸೋಲಿಗೆ ಜನಾರ್ಧನ ರೆಡ್ಡಿ ಕಾರಣರೆಂದು ನೇರ ಬೊಟ್ಟು ಮಾಡಿದ ಹಿನ್ನೆಲೆಯಲ್ಲಿ ಶ್ರೀರಾಮುಲು ಅವರು ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ವಿರುದ್ದ ತೀವ್ರ ಕೋಪ ಹೊರ ಹಾಕಿದ್ದರು. ಸಭೆಯಿಂದ ಹೊರ ನಡೆದಿದ್ದಲ್ಲದೆ ರಾಜ್ಯ ಬಿಜೆಪಿ ಅಧ್ಯಕ್ಷರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದರು.
ಬಳಿಕ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ನಡುವೆ ಅಸಮಾಧಾನ ಸ್ಪೋಟಗೊಂಡಿತ್ತು. ಏತನ್ಮಧ್ಯೆ ಶ್ರೀರಾಮುಲು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಪಕ್ಷದ ರಾಷ್ಟ್ರೀ ಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ದೂರವಾಣಿ ಯಲ್ಲಿ ಸಂಪರ್ಕಿಸಿ ಮಾತನಾಡಿದ್ದಲ್ಲದೆ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದರು