ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಅತಂತ್ರವಾಗಿದ್ದು ಬುಧವಾರ ಅಥವಾ ಗುರುವಾರ ಸ್ಪಷ್ಟ ಚಿತ್ರಣ ಹೊರಬೀಳುವ ನಿರೀಕ್ಷೆಯಿದೆ.
ಇಡೀ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇದೀಗ ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನಡೆಯ ಮೇಲೆ ನಿರ್ಧರಿತವಾಗಲಿದೆ. ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದೆ.
ಸದ್ಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಯೋಗೇಶ್ವರ್ ಅವರು ತಾವು ಗುರುವಾರ ಮಧ್ಯಾಹ್ನ 12.00 ಗಂಟೆಗೆ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಆದರೆ, ಯಾವ ಪಕ್ಷದಿಂದ ಎಂಬ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ. ಬಿಜೆಪಿಯಿಂದಲೇ ಸ್ಪರ್ಧಿಸಲು ಜೆಡಿಎಸ್ ಅವಕಾಶ ಕಲ್ಪಿಸಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿ ಕಾದು ನೋಡುತ್ತಿದ್ದಾರೆ.
ಈ ನಡುವೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ನಾಯಕರು ಯೋಗೇಶ್ವರ್ ಅವರನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಅದಾಗದಿದ್ದರೂ ಯೋಗೇಶ್ವರ್ ನಡೆ ನೋಡಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಅಖೈರುಗೊಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದೆಲ್ಲದರ ಮಧ್ಯೆ ಮಂಗಳವಾರ ಸಮಾಜವಾದಿ ಪಕ್ಷದ ಮುಖಂಡರು ಯೋಗೇಶ್ವರ್ ಅವರನ್ನು ಭೇಟಿ ಮಾಡಿ ಪಕ್ಷದ ಪರ ಸ್ಪರ್ಧಿಸುವಂತೆ ಕೋರಿ ಬಿ ಫಾರಂ ಹಸ್ತಾಂತರಿಸಿದ್ದಾರೆ. ಹಿಂದೆ ಯೋಗೇಶ್ವರ್ ಅವರು ಇದೇ ಪಕ್ಷದ ಚಿಹ್ನೆಯ ಅಡಿಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು