ಬೆಂಗಳೂರು : ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದೆ. ಅಂತಹ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿದ್ದರೂ ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿ ದ್ದಾರೆ.
ಸಣ್ಯ ವ್ಯಾಪಾರಿಗಳಿಗೆ ವಾಣಿಜ್ಯ ಇಲಾಖೆ ನೀಡಿರುವ ಜಿಎಸ್‌ಟಿ ನೋಟಿಸ್ ವಿಷಯಕ್ಕೆ ಸಂಬಂಧಿಸಿ ದಂತೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಅವರು ಮಾಧ್ಯಮಗಳಿಗೆ ಈ ಕುರಿತು ವಿವರಿಸಿದರು.
ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ತೆರಿಗೆ ಪಾವತಿಸಬೇಕು. ನೋಟಿಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ, ಅವರೆಲ್ಲರೂ ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಿಕೊಳ್ಳಬೇಕು. ಕಾನೂನು ಬದ್ಧವಾಗಿರುವ ವ್ಯಾಪಾರ ವಹಿವಾಟುಗಳಿಗೆ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ ಎಂದರು.

