ಮೈಸೂರು : ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಮೇಲೆ ಕರ್ನಾಟಕ ತಲಾ ಆದಾಯದಲ್ಲಿ ಮೊದಲ ಸ್ಥಾನದಲ್ಲಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲೆಯ ನಂಜನಗೂಡು ತಾಲೂಕಿನ ಹದಿನಾರು ಗ್ರಾಮದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೂ.1107.72 ಕೋಟಿ ಮೌಲ್ಯದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶ ಗಳು ದೊರೆಯಬೇಕು. ಸಮಾಜದಲ್ಲಿ ಇರುವ ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಹಾಗೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಹಣ ಸಿಕ್ಕಿ ಆರ್ಥಿಕ ಚಟುವಟಿಕೆಗಳು ಹೆಚ್ಚಾದವು. ಇದರಿಂದ ತಲಾ ಆದಾಯ ಹೆಚ್ಚಾಗಿದೆ.
ಜಿಎಸ್‌ಟಿ ತೆರಿಗೆ ಪಾವತಿಯಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿ ಇದೆ. ಮಹಾರಾಷ್ಟ್ರ ರಾಜ್ಯ ಮೊದಲ ಸ್ಥಾನದಲ್ಲಿ ಇದೆ. ನಾವು 2023ರ ಚುನಾವಣೆಗೆ ಮೊದಲು 542 ಭರವಸೆಗಳನ್ನು ನೀಡಿದ್ದೆವು. ಅದರಲ್ಲಿ 242 ಭರವಸೆಗಳನ್ನು ಈಡೇರಿಸಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ತಿಳಿಸಿದರು

