86
ರಾಮನಗರ : ಮಹಾತ್ಮಾ ಗಾಂಧೀಜಿಯವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಶತಮಾನೋತ್ಸವ ಸ್ಮರಣಾರ್ಥ ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಭಾನುವಾರ ಯುವ ಪರ್ವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿ, ಆನ್‌ಲೈನ್ ಮೂಲಕ 100ಸ್ಥಳಗಳಲ್ಲಿ ನಿರ್ಮಾಣವಾಗಲಿರುವ ಕಾಂಗ್ರೆಸ್ ಭವನಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು. ಈ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗುವುದು. ಈ ವೇಳೆ, ರಾಹುಲ್ ಗಾಂಧಿ ಅವರು ಕಾರ್ಯಕರ್ತರ ಜತೆಗೂ ಚರ್ಚೆ ನಡೆಸಲಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷ ತುಂಬಲಿದೆ. ಹಾಗಾಗಿ, ವಿಜಯನಗರದಲ್ಲಿ ಬೃಹತ್ ಸಮಾವೇಶ ಆಯೋಜಿಸ ಲಾಗುತ್ತಿದೆ. ಯುದ್ಧ ನಡೆಯುತ್ತಿರುವ ಕಾರಣ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

