ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಆರೋಪ ಮಾಡಿದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲಾಗಿದೆ. ಆರೋಪ ಮಾಡಲು ಆತನ ಬಳಿ ದಾಖಲೆ ಏನಿದೆ. ನಮ್ಮ ನಡುವೆ ರಾಜಕೀಯವಾಗಿ ಸಾಕಷ್ಟು ಭಿನ್ನಾಭಿಪ್ರಾಯವಿರಬಹುದು. ಆದರೆ ನಮ್ಮ ವಿರೋಧಿಗಳ ಬಗ್ಗೆ ಏನೇನೋ ಮಾತನಾಡುತ್ತಾನೆ ಎಂದು ನಾವು ಖುಷಿಪಡುವುದಲ್ಲ ಎಂದರು.
ಇಂದು ಅವರ ಬಗ್ಗೆ ಮಾತನಾಡಿದವರು ನಾಳೆ ನಮ್ಮ ಬಗ್ಗೆಯೂ ಮಾತನಾಡುತ್ತಾರೆ. ಈ ಹಿಂದೆ ಮುಖ್ಯಮಂತ್ರಿಯವರ ಹಾಗೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಈ ರಾಜ್ಯದಲ್ಲಿ ಯಾರ ಸ್ವಾಭಿಮಾನಕ್ಕೂ ಧಕ್ಕೆ ಬರದಂತೆ ಕೆಲಸ ಮಾಡಬೇಕು. ರಾಜಕೀಯ ಮಾಡಲಿ, ರಾಜಕೀಯವಾಗಿ ಆರೋಪಗಳನ್ನು ಮಾಡಲಿ. ಆದರೆ ಆಧಾರಗಳನ್ನಿಟ್ಟುಕೊಂಡು ಆರೋಪ ಮಾಡಲಿ ಎಂದರು.

