ಬೆಂಗಳೂರು : ಗೃಹಲಕ್ಷ್ಮಿ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ ಗೃಹಲಕ್ಷ್ಮಿ ಸಂಘಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಗೃಹಲಕ್ಷ್ಮಿ ಸಂಘವನ್ನು ರಚಿಸಲಾಗುವುದು.ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.25 ಕೋಟಿ ಫಲಾನುಭವಿಗಳಿದ್ದಾರೆ. ಪ್ರತಿ ತಿಂಗಳು ಸಂದಾಯವಾಗುತ್ತಿರುವ 2 ಸಾವಿರ ರೂಪಾಯಿಯನ್ನು ಇನ್ನಷ್ಟು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಗೃಹಲಕ್ಷ್ಮಿ ಸಂಘಗಳನ್ನು ರಚಿಸಲಾಗುವುದು ಎಂದರು.ಇದಕ್ಕೂ ಮೊದಲು ರಾಜ್ಯದಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಆಯ್ದ ನಾಲೈದು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸುವ ಉದ್ದೇಶ ಹೊಂದಲಾಗಿದೆ. ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಗರ- ಗ್ರಾಮೀಣ ಪ್ರದೇಶಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಅಸ್ತಿತ್ವಕ್ಕೆ ತರಲಾಗುವುದು ಎಂದು ತಿಳಿಸಿದರು.

