ಬೆಂಗಳೂರು : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು.
ಮಂಗಳವಾರ ಮಧ್ಯಾಹ್ನ 3.00 ಗಂಟೆಗೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾದ ಸಚಿವ ಜಮೀರ್ ಅಹ್ಮದ್ ಅವರನ್ನು ಎರಡೂವರೆ ತಾಸುಗಳ ಕಾಲ ವಿಚಾರಣೆ ನಡೆಸಲಾಯಿತು. ಆದಾಯಕ್ಕಿಂತ ಹೆಚ್ಚಿನ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಜಮೀರ್ ಅಹ್ಮದ್ ಅವರಿಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೊಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿದ್ದರು.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಕುರಿತು ಪ್ರಶ್ನಿಸಿ ಉತ್ತರ ಪಡೆದುಕೊಳ್ಳಲಾಗಿದೆ. ಯಾವ ಮೂಲಗಳಿಂದ ಹಣ ಸಂಪಾದನೆ ಮಾಡಲಾಗಿದೆ ಎಂಬುದರ ವಿವರಣೆಯನ್ನೂ ಅಧಿಕಾರಿಗಳು ಪಡೆದು ಕೊಂಡಿದ್ದಾರೆ.ಅಲ್ಲದೆ, ಪ್ರಾಥಮಿಕ ತನಿಖೆಯಲ್ಲಿ ಲಭ್ಯವಾದ ಮಾಹಿತಿ ಮತ್ತು ದಾಖಲೆಗಳನ್ನು ಮುಂದಿಟ್ಟು ಅಗತ್ಯ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾ ಗಿತ್ತು. ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರೆದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು. ಪ್ರಾಥಮಿಕ ಹಂತದ ತನಿಖೆ ಮುಗಿಸಿದ ಪೊಲೀಸರು, ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆದಿದ್ದರು.
2021ರಲ್ಲಿ ಇ.ಡಿ ಅಧಿಕಾರಿಗಳು ದಾಳಿ ಮಾಡಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿರುವುದನ್ನು ಪತ್ತೆ ಹಚ್ಚಿದ್ದರು. ಬಳಿಕ ಆಗಿನ ಎಸಿಬಿಗೆ ಪತ್ರ ಬರೆದು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಬೇಕೆಂದು ಇ.ಡಿ ಸೂಚಿಸಿತ್ತು. ಅದರನ್ವಯ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದರು.