ಶಿವಮೊಗ್ಗ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ನಿವಾಸಕ್ಕೆ ವಿಧಾನ ಪರಿಷತ್ ವಿಪಕ್ಷನಾಯಕ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ಮೃತ ಚಂದ್ರಶೇಖರನ್ ಗೆ ಇಬ್ಬರು ಮಕ್ಕಳಿದ್ದಾರೆ. ಅವರು ಪ್ರಾಮಾಣಿಕ ಅಧಿಕಾರಿಯಾಗಿದ್ದರು. ಇನ್ನು ಮುಂದೆ ನಮ್ಮ ಕುಟುಂಬದ ಗತಿಯೇನು ಎಂದು ಮೃತನ ಪತ್ನಿ ಕಣ್ಣೀರಿಡುತ್ತಿದ್ದಾರೆ. ನಮಗೆ ನ್ಯಾಯ ಕೊಡಿ ಎನ್ನುತ್ತಿದ್ದಾರೆ. ಸರ್ಕಾರ ತಕ್ಷಣ 25 ಲಕ್ಷ ರೂ.ಗಳ ಪರಿಹಾರ ಅವರ ಕುಟುಂಬಕ್ಕೆ ನೀಡಬೇಕು ಎಂದು ಒತ್ತಾಯಿಸಿದರು. ಆತ್ಮಹತ್ಯೆ ಪ್ರಕರಣವನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕಾಗಿತ್ತು. ಆದರೆ ರಾಜ್ಯ ಸರ್ಕಾರಕ್ಕೆ ಸಿಬಿಐ ತನಿಖೆಗೆ ಕೊಡಲು ಭಯ ಕಾಡುತ್ತಿದೆ. ಹಾಗಾಗಿ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದರು