ಬೆಂಗಳೂರು : ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರ ಜತೆ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅದರ ಹೊರತಾಗಿಯೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಮಂಗಳವಾರ ಬೆಳಗ್ಗೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದೆ. ಇದರಿಂದ ರಾಜ್ಯಾದ್ಯಂತ ಬಸ್ಸುಗಳ ಸೇವೆ ವ್ಯತ್ಯಯವಾಗಿ 1 ಕೋಟಿಗೂ ಹೆಚ್ಚು ಪ್ರಯಾಣಿಕರು ಪರದಾಡುವ ಆತಂಕ ಎದುರಾಗಿದೆ.
ಈ ನಡುವೆ ಹೈಕೋರ್ಟ್ ಆದೇಶದ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲು ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದ್ದು, ಮಂಗಳವಾರ ಬೆಳಗ್ಗೆ ಸಮಿತಿ ಪದಾಧಿಕಾರಿಗಳ ಸಭೆ ನಡೆಸಿ ಮುಷ್ಕರದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ. ಒಂದು ವೇಳೆ ಕ್ರಿಯಾ ಸಮಿತಿ ಪೂರ್ವ ನಿರ್ಧಾರದಂತೆ ಮುಷ್ಕರಕ್ಕೆ ಇಳಿದರೆ, ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯವಾಗುವುದು ಸ್ಪಷ್ಟ

