ಉಡುಪಿ : ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಗುರುವಾರ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರ್ಕಾರಕ್ಕೆ ಹೇಳಿದಾಕ್ಷಣ ಯೋಜನೆಯನ್ನು ನಿಲ್ಲಿಸಲು ಸಾಧ್ಯವೇ ಎಂದರು. ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯ ನಿಗಮಗಳು ಒಳ್ಳೆಯ ಹೆಸರು ಪಡೆದಿದ್ದು, ಉತ್ತಮ ಲಾಭದಲ್ಲಿವೆ. ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ ಎಂದು ಹೇಳಿದರು.