ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಸ್ಥರು, ರಾಜ್ಯದ ಇಬ್ಬರು ಸಚಿವರು ಹಾಗೂ ಒಬ್ಬ ಹಿರಿಯ ಐಎಎಸ್ ಅಧಿಕಾರಿ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ಶುಕ್ರವಾರ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ ಖರ್ಗೆ, ರಾಹುಲ್ ಖರ್ಗೆ, ರಾಧಾಬಾಯಿ ಖರ್ಗೆ, ರಾಧಾಕೃಷ್ಣ ಸಚಿವ ಎಂ.ಬಿ. ಪಾಟೀಲ್ ಮತ್ತು ಐಎಎಸ್ ಅಧಿಕಾರಿ ಡಾ. ಎಸ್. ಸೆಲ್ವಕುಮಾರ್ ಸೇರಿದಂತೆ ಹಲವರ ವಿರುದ್ಧ ವಂಚನೆ, ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಸರ್ಕಾರಿ ಭೂ ಕಬಳಿಕೆಗೆ ಸಂಚು ಮತ್ತು ಸರ್ಕಾರಿ ಭೂ ಕಬಳಿಕೆಗೆ ಸಹಕಾರ ಸಂಬಂಧಿತ ಪ್ರಕರಣಗಳು ದಾಖಲಾಗಿವೆ.
ತಮ್ಮ ಅಧಿಕಾರ ಮತ್ತು ರಾಜಕೀಯ ಪ್ರಭಾವ ದುರ್ಬಳಕೆ ಮಾಡಿ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬಸ್ಥರ ನೇತೃತ್ವದ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಒಂದೇ ಉದ್ದೇಶಕ್ಕೆ ಬೆಂಗಳೂರು ನಗರದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಮೂಲ್ಯ ಸರ್ಕಾರಿ ಸ್ವತ್ತುಗಳನ್ನು ಹಂಚಿಕೆ ಮಾಡಿಸಿಕೊಳ್ಳಲಾಗಿದೆ ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್. ಆರ್. ರಮೇಶ್ ದೂರು ನೀಡಿದ್ದಾರೆ.