ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಜೀ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆಯ ಪೊಲೀಸರು ಉಜಿರೆ ಸಮೀಪದ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.
ಬೆಳಗ್ಗೆ ಉಜಿರೆಯ ನಿವಾಸದಲ್ಲಿ ವಶಕ್ಕೆ ಪಡೆಯುವ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲ, ಪತ್ನಿ, ಬೆಂಬಲಿಗರು ಪೊಲೀಸರಿಗೆ ಅಡ್ಡಿಪಡಿಸಿದ್ದಾರೆ. ಈ ವೇಳೆ, ಸಂಘರ್ಷದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ, ದಾರಿ ಮಧ್ಯೆ ಅವರನ್ನು ಕರೆದೊಯ್ಯುತ್ತಿದ್ದ ಕರ್ತವ್ಯನಿರತ ಎಎಸ್ಪಿ ಕಾರಿಗೆ ತಿಮರೋಡಿ ಬೆಂಬಲಿಗರು ತಮ್ಮ ಕಾರನ್ನು ಡಿಕ್ಕಿ ಹೊಡೆಸಿದ್ದಾರೆ. ಈ ಸಂಬಂಧ ತಿಮರೋಡಿ ಅವರ ಮೂವರು ಬೆಂಬಲಿಗರನ್ನು ಬಂಧಿಸಲಾಗಿದೆ.
ಬಳಿಕ, ಪೊಲೀಸರು ಖಾಸಗಿ ವಾಹನದಲ್ಲಿ ಬ್ರಹ್ಮಾವರ ಠಾಣೆಗೆ ತಿಮರೋಡಿ ಅವರನ್ನು ಕರೆ ತಂದು, ವಿಚಾರಣೆಗೊಳಪಡಿಸಿ, ತಾಲೂಕು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಇದೇ ವೇಳೆ, ತಿಮರೋಡಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಜಾಮೀನು ಅರ್ಜಿಯ ವಿಚಾರಣೆಯನ್ನು ಆ.23ಕ್ಕೆ ಮುಂದೂಡಿ, ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಸಂತೋಷ್ ಬಗ್ಗೆ ಅವಹೇಳನಕಾರಿ ಭಾಷಣ :
ತಿಮರೋಡಿ ಅವರು ಬೆಳ್ತಂಗಡಿಯಲ್ಲಿ ಇತ್ತೀಚೆಗೆ ಬಿ.ಎಲ್.ಸಂತೋಷ್ ಅವರ ಬಗ್ಗೆ ಮಾನಹಾನಿಕರವಾಗಿ ಮಾತನಾಡಿದ್ದರು. ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಉಡುಪಿ ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್ ಅವರು ಮಂಗಳವಾರ ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ವಿಚಾರಣೆಗೆ ಈ ಹಿನ್ನೆಲೆಯಲ್ಲಿ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ತಿಮರೋಡಿಗೆ ಬುಧವಾರ ಮತ್ತು ಗುರುವಾರ 2 ಬಾರಿ ನೋಟಿಸ್ ನೀಡಿದ್ದರು. ಆದರೆ, ತಿಮರೋಡಿ ವಿಚಾರಣೆಗೆ ಹಾಜರಾಗಿರಲಿಲ್ಲ.

