ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದ 383 ದಿನಗಳಲ್ಲಿ ಮೊದಲ ವಿಕೆಟ್ ಪತನವಾಗಿದೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರರ ತಲೆದಂಡವಾಗಿದೆ.
ಗುರುವಾರ ರಾತ್ರಿ ಖಾಸಗಿ ವಾಹನದಲ್ಲಿ ಮುಖ್ಯಮಂತ್ರಿಗಳ ನಿವಾಸ ಕಾವೇರಿಗೆ ಆಗಮಿಸಿದ ಬಿ. ನಾಗೇಂದ್ರ ಅವರು ಒಂದು ಸಾಲಿನ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪತ್ರ ಸ್ವೀಕರಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಜೊತೆಯಲ್ಲಿದ್ದರು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧಿಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಬೆನ್ನಲ್ಲೇ ನಿಗಮದಲ್ಲಿ 187 ಕೋಟಿ ರೂ. ಹಗರಣ ನಡೆದಿರುವುದು ಬಹಿರಂಗವಾಗಿತ್ತು.