ಬೆಂಗಳೂರು : ಮುಡಾ, ಸಿದ್ದಾರ್ಥ ವಿಹಾರ ಟ್ರಸ್ಟ್ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹೀಗೆ ಸಾಲು ಸಾಲು ಹಗರಣಗಳ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಕಾಂಗ್ರೆಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರ ಗಳನ್ನು ಗೆದ್ದು ಬೀಗಬೇಕೆಂದು ಅತಿ ಉತ್ಸಾಹದಿಂದಲೇ ಸಿದ್ಧತೆ ನಡೆಸುತ್ತಿರುವಾಗಲೇ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪರಪ್ಪನ ಅಗ್ರಹಾರದ ಜೈಲು ಪಾಲಾಗಿದ್ದಾರೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆ ನಡೆಸಿ ಆದೇಶ ಕಾದಿರಿಸಿದ್ದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಗುರುವಾರ ಆದೇಶವನ್ನು ಪ್ರಕಟಿಸಿದರು. 2010ರಲ್ಲಿ 11,312 ಮೆ.ಟನ್ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸಿದ ಪ್ರಕರಣದಲ್ಲಿ ಸತೀಶ್ ಸೈಲ್ ಪಾತ್ರವಿದೆ ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರನ್ನು ಅಪರಾಧಿ ಎಂದು ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣವನ್ನು ನ್ಯಾಯಾಲಯ ಶುಕ್ರವಾರ ಪ್ರಕಟಿಸಲಿದ್ದು, ಈ ಸಂದರ್ಭದಲ್ಲಿ ಅಪರಾಧಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ತೀರ್ಪಿನಲ್ಲಿ ತಿಳಿಸಿದೆ. ಅದರನ್ವಯ ಕಾರ್ಯಪ್ರವೃತ್ತರಾದ ಸಿಬಿಐ ಅಧಿಕಾರಿಗಳು ಕೆಲವೇ ಕ್ಷಣಗಳಲ್ಲಿ ನ್ಯಾಯಾಲಯದ ಆವರಣದಲ್ಲೇ ಶಾಸಕರನ್ನು ವಶಕ್ಕೆ ಪಡೆದಿದ್ದಾರೆ.
ಇನ್ನುಳಿದ ಅಪರಾಧಿಗಳನ್ನು ಬಂಧಿಸಲಿರುವ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ 12.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.