ಮೈಸೂರು : ಮುಡಾದಿಂದ 50:50 ಅನುಪಾತದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿರುವುದನ್ನು ರದ್ದುಪಡಿಸಿ, ಆ ನಿವೇಶನಗಳನ್ನು ಜಪ್ತಿ ಮಾಡಲು ಗುರುವಾರ ನಡೆದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ. ಮುಡಾದ ಈ ನಿರ್ಧಾರ ಈಗಾಗಲೇ ನಿವೇಶನಗಳನ್ನು ಪಡೆದಿರುವವರಿಗೆ ಆಘಾತ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾನೂನು ಕಂಟಕವಾಗಿ ಪರಿಣಮಿಸಿರುವ 50:50 ಅನುಪಾತದ ನಿವೇಶನ ಹಂಚಿಕೆಯ ವಿವಾದವನ್ನೇ ಕೊನೆಗಾಣಿಸುವ ಪ್ರಯತ್ನವನ್ನು ಈ ಮೂಲಕ ನಡೆಸಲಾಗಿದೆ ಎಂದು ತಿಳಿದು ಬಂದಿದೆ
ಮುಡಾ ಕಚೇರಿಯ ಸಭಾಂಗಣದಲ್ಲಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ವರದಿ ಬಂದ ಮೇಲೆ ನಿವೇಶನ ಹಂಚಿಕೆ ರದ್ದತಿ ನಿರ್ಣಯವನ್ನು ಅಂಗೀಕರಿಸಲಾಗಿದೆ.