ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧ ತನಿಖೆ ಕೈಗೊಂಡಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಮತ್ತಷ್ಟು ಅಕ್ರಮಗಳನ್ನು ಬಯಲು ಮಾಡಿದ್ದು, 600ಕ್ಕೂ ಹೆಚ್ಚು ಸ್ಥಿರಾಸ್ತಿಗಳು ಬೇನಾಮಿ ಹೆಸರಲ್ಲಿರುವುದನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ 300 ಕೋಟಿ ರು. ಮೌಲ್ಯದ 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಬೆನ್ನಲ್ಲೇ ಈ ವಿಚಾರ ಬೆಳಕಿಗೆ ಬಂದಿದೆ.
ಬೇನಾಮಿ ಹೆಸರಲ್ಲಿ ಸ್ಥಿರಾಸ್ತಿ ಮಾಡಿರುವ ಕುರಿತು ತನಿಖೆ ವೇಳೆ ಗೊತ್ತಾಗಿದ್ದು, ಈ ಬಗ್ಗೆ ಮಾಹಿತಿ ನೀಡುವಂತೆ ಇ.ಡಿ. ಅಧಿಕಾರಿಗಳು ಮುಡಾದಿಂದ ಮಾಹಿತಿ ಕೋರಿದ್ದಾರೆ. ಈ ಸಂಬಂಧ ಪತ್ರ ಬರೆದು ಮಾಹಿತಿ ಒದಗಿಸುವಂತೆ ತಿಳಿಸಲಾಗಿದೆ ಎಂದು ಮೂಲಗಳು ಹೇಳಿವೆ.