ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದ ಆರೋಪಗಳ ಬೆನ್ನಲ್ಲೇ ಆರೋಪಗಳ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಪಿ.ಎನ್. ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಶುರುವಾಗುತ್ತಿರುವ ಹೊತ್ತಿನಲ್ಲೇ ಭಾನುವಾರ ಏಕ ಸದಸ್ಯ ವಿಚಾರಣಾ ಆಯೋಗವನ್ನು ದಿಢೀರ್ ರಚನೆ ಮಾಡಿದ್ದು, ಆರು ತಿಂಗಳ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ ತಿಳಿಸಿದೆ.