ಬೆಂಗಳೂರು : ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಜನರ ಉತ್ಸವ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೋಮವಾರ ವಿಧಾನಸೌಧದ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ ಬಾರಿ ಬರಗಾಲದ ಕಾರಣ ಅದ್ದೂರಿಯಾಗಿ ಆಚರಿಸಲು ಆಗಿರಲಿಲ್ಲ ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂ. ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು. ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೊಗಳು ಹೆಚ್ಚು ಆಕರ್ಷಕ, ಅರ್ಥ ಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.