ಬೆಂಗಳೂರು : ತನ್ನ ಮನೆಕೆಲಸದಾಕೆಯ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗ ನ್ಯಾಯಾಲಯವು ಜೀವನ ಪರ್ಯಂತ ಸೆರೆವಾಸದ ಶಿಕ್ಷೆ ಹಾಗೂ 11.60 ಲಕ್ಷ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ದಂಡದ ಹಣದಲ್ಲಿಯೇ ಸಂತ್ರಸ್ತೆಗೆ 11.25 ಲಕ್ಷ ರೂ. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.
ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಮೂರು ಅತ್ಯಾಚಾರ ಪ್ರಕರಣ, ಒಂದು ಲೈಂಗಿಕ ದೌರ್ಜನ್ಯ ಒಟ್ಟು ನಾಲ್ಕು ಪ್ರಕರಣಗಳ ಪೈಕಿ ಒಂದರಲ್ಲಿ ಪ್ರಜ್ವಲ್ ದೋಷಿ ಎಂದು ಶುಕ್ರವಾರ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು.
ಶನಿವಾರ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ವಕೀಲ ಬಿ.ಎನ್. ಜಗದೀಶ್, ಎಸ್‌ಪಿಪಿ ಅಶೋಕ್ ನಾಯಕ್ ವಾದಮಂಡಿಸಿ ಪ್ರಜ್ವಲ್‌ಗೆ ಗರಿಷ್ಠ ಶಿಕ್ಷೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇನ್ನು ಪ್ರಜ್ವಲ್ ಪರ ವಾದ ಮಂಡನೆ ಮಾಡಿದ್ದ ವಕೀಲೆ ನಳಿನಿ ಗೌಡ, ಶಿಕ್ಷೆ ನೀಡುವ ವೇಳೆ ಅಪರಾಧಿಯ ರಾಜಕೀಯ ಭವಿಷ್ಯ, ವಯಸ್ಸು ಇತ್ಯಾದಿಗಳನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದರು.

