ಬಳ್ಳಾರಿ : ಸುಮಾರು ವರ್ಷಗಳ ಬಳಿಕ ಗಣಿನಾಡು ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ನಲ್ಲಿ ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದ್ದು, ಬೂಕರ್ ಪ್ರಶಸ್ತಿ ಪುರಸ್ಕೃ ತರಾದ ಬಾನು ಮುಷ್ತಾಕ್ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆಗೊಳಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಹೇಳಿದರು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕಾರಣಿ ಸಭೆಯಲ್ಲಿ ನಾಡಿನ ಎಲ್ಲ ನಮ್ಮ ಸರ್ವ ಸದಸ್ಯರು ಸೇರಿದಂತೆ ಎಲ್ಲರೂ ಒಮ್ಮತದಿಂದ ಬಾನು ಮುಷ್ತಾಕ್ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದರು.
ಕಾರ್ಯಕಾರಣಿ ಸಭೆಯಲ್ಲಿ ಮಾಲತಿ ಪಟ್ಟಣ ಶೆಟ್ಟಿ, ವೀಣಾ ಶಾಂತೇಶ್ವರ, ಬಾನು ಮುಸ್ತಾಕ್ ಅವರ ಹೆಸರುಗಳನ್ನು ಸರ್ವಾ ಧ್ಯಕ್ಷರ ನೇಮಕ ವಿಚಾರದಲ್ಲಿ ಚರ್ಚೆಗೆ ಬಂದವು. ಅಂತಿಮವಾಗಿ ಸಭೆಯಲ್ಲಿ ಎಲ್ಲರೂ ಒಮ್ಮತದಿಂದ ಬಾನು ಮುಷ್ಕಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ನಾಡಿನ ಸಮಸ್ತ ಎಲ್ಲ ಕನ್ನಡಾಭಿಮಾನಿಗಳು ಬಳ್ಳಾರಿಯಲ್ಲಿ ಆಯೋಜಿಸಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು, ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು

