ಬೆಂಗಳೂರು : ಪೊಲೀಸ್ ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಮಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜ ಬಂಧಿಸಲು ಮುಂದಾಗಿದ್ದು ಸರಿಯಲ್ಲ ಮತ್ತು ರಾಜಕಾರಣಿಗಳ ಒತ್ತಡಕ್ಕೆ ಮಣಿದು ಪೊಲೀಸರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದಾರೆ. ಬುಧವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಪದೇ ಪದೇ ಬಿಜೆಪಿ ಮೇಲಿನ ದಬ್ಬಾಳಿಕೆಯನ್ನು ಸಹಿಸಲು ಸಾಧ್ಯವಿಲ್ಲ, ಶಾಸಕರ ಬಂಧನದ ದುಸ್ಸಾಹಸಕ್ಕೆ ಪೊಲೀಸರು ಮುಂದಾದರೆ ಮುಂದೆ ನಡೆಯುವ ಘಟನೆಗೆ ರಾಜ್ಯ ಸರ್ಕಾರ, ಪೊಲೀಸ್ ಅಧಿಕಾರಿಗಳು ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಸುಗದುವಾಗಿ ಹೋಗುತ್ತಿರುವ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುವುದನ್ನು ಸಹಿಸಲು ಅಸಾಧ್ಯ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು. ಪೊಲೀಸರು ಕಾನೂನು ಸುವ್ಯವಸ್ಥೆ ಹದಗೆಡಲು ಕುಮ್ಮಕ್ಕು ನೀಡುತ್ತಿದ್ದಾರೆ. ಶಾಸಕರ ಮೇಲೆ ಕ್ರಮ ಸಲ್ಲದು ಮತ್ತು ವಿನಾಕಾರಣ ಪಕ್ಷದ ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಿಸಿದ್ದು, ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.