ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಇಡೀ ಸಚಿವ ಸಂಪುಟವೇ ಭಾಗಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದರು. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಪಕ್ಷದ ಎಲ್ಲ ಸಚಿವರು, ಟಕ್ ಟಕಾ ಟಕ್ ಎಂಬಂತೆ ಹಣ ವರ್ಗಾವಣೆ ಮಾಡಿದ್ದಾರೆ. ಇದೊಂದು ಬ್ರಹ್ಮಾಂಡ ಭ್ರಷ್ಟಾಚಾರ, 187 ಕೋಟಿ ರೂ. ನುಂಗಲು ಒಬ್ಬ ಸಚಿವನಿಂದ ಸಾಧ್ಯವಿಲ್ಲ. ಇದು ಸಣ್ಣ ಮೊತ್ತವೇನಲ್ಲ, ಅವರ ಜೀವನ, ಅವರು, ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು ಸಂತೃಪ್ತಿಯಿಂದ ಬದುಕುವಷ್ಟು ದುಡ್ಡು ಇದು ಎಂದು ಹೇಳಿದರು.