ಬೆಂಗಳೂರು : ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮ, ಸಾಮೂಹಿಕ ನಕಲು ಇತ್ಯಾದಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ದಿಟ್ಟ ಕ್ರಮವು ಕಡಿವಾಣ ಹಾಕಿದೆ. ಪರಿಣಾಮ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಶೇ.10.49ರಷ್ಟು ಕುಸಿತ ಕಂಡಿದೆ. ಪ್ರತೀ ಬಾರಿ ಎಸ್‌ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುವಾಗ ಕೆಲವು ಜಿಲ್ಲೆಗಳಿಂದ ಸಾಮೂಹಿಕ ನಕಲಿನ ಕುರಿತು ಆರೋಪಗಳು ಕೇಳಿ ಬರುತ್ತಿದ್ದವು.
ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳ ಮೇಲ್ವಿಚಾರಣೆಗೆ ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಇದರಿಂದ ಈ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಡೆಯುತ್ತಿದ್ದ ಸಾಮೂಹಿಕ ನಕಲಿಗೆ ಕಡಿವಾಣ ಬಿದ್ದಿದ್ದು, ಪಾರದರ್ಶಕವಾಗಿ ಪರೀಕ್ಷೆ ಜರುಗಿದೆ.