ಬೆಂಗಳೂರು : ಮುಡಾ ಹಗರಣವು ಸಿದ್ದರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದ್ದು, ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಇದೀಗ ಪ್ರಕರಣ ಇ.ಡಿ. ಅಂಗಳಕ್ಕೆ ಬಂದಿದೆ. ಪ್ರಕರಣದಲ್ಲಿ ಕೋಟ್ಯಂತರ ರು. ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಪತ್ನಿ ಪಾರ್ವತಿ ಹೆಸರಲ್ಲಿ ಕಾನೂನು ಬಾಹಿರವಾಗಿ ಮುಡಾದಿಂದ ನಿವೇಶನ ಪಡೆದುಕೊಂಡಿದ್ದಾರೆ. ಬದಲಿ ನಿವೇಶನ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮುಡಾದಿಂದ ಕಾನೂನು ಬಾಹಿರವಾಗಿ 14 ನಿವೇಶನ ಗಳನ್ನು ಪಡೆದುಕೊಂಡು, 55 ಕೋಟಿ ರು. ಗಿಂತ ಹೆಚ್ಚಿನ ಮೊತ್ತವನ್ನು ಲಾಭ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಅಗತ್ಯ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದೆ ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ