ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ರಕ್ಷಣಾ ಇಲಾಖೆಗೆ ಸೇರಿದ ಭೂಮಿ ಹಸ್ತಾಂತರಕ್ಕೆ ಮನವಿ ಮಾಡಿದ್ದಾರೆ
ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉತ್ತರ ಪ್ರದೇಶ, ತಮಿಳುನಾಡು ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲಿಯೂ ಡಿಫೆನ್ಸ್ ಕಾರಿಡಾರ್ ಸ್ಥಾಪನೆ, ಐತಿಹಾಸಿಕ ಮೈಸೂರು ದಸರಾ ವೇಳೆ ಏರ್‌ಶೋ ಆಯೋಜನೆ ಸೇರಿದಂತೆ ಹಲವು ಯೋಜನೆಗಳ ಜಾರಿಗೆ ಸಚಿವರಲ್ಲಿ ಮನವಿ ಮಾಡಿದ್ದೇನೆ. ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳ ಜಾರಿಗಾಗಿ ರಕ್ಷಣಾ ಇಲಾಖೆಗೆ ಸೇರಿದ ಭೂಮಿಯ ಅಗತ್ಯವಿದೆ. ಅಗತ್ಯ ಭೂಮಿಯ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
ಈ ವೇಳೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಕೂಡ ಉಪಸ್ಥಿತರಿದ್ದರು.

