ಬೆಂಗಳೂರು : ವಿಧಾನಮಂಡಲ ಜಂಟಿ ಅಧಿವೇಶನ ಮಾ.3 ರಿಂದ ಶುರುವಾಗಲಿದ್ದು, ಮಾ.7 ರಂದು 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದೇನೆ. ಮಾರ್ಚ್ ತಿಂಗಳ ಕೊನೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸ ವರ್ಷದ ಮೊದಲ ಅಧಿವೇಶನ ಮಾ.3 ರಂದು ಶುರುವಾಗಲಿದೆ. ಮಾ.3 ರಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಬಳಿಕ ಮಾ.4 ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾ.7 ರಂದು ಬಜೆಟ್ ಮಂಡನೆ ಮಾಡುತ್ತೇನೆ ಎಂದು ಹೇಳಿದರು.
ಎಷ್ಟು ದಿನ ಕಲಾಪ ನಡೆಯಲಿದೆ ಎಂಬ ಪ್ರಶ್ನೆಗೆ, ಆ ಬಗ್ಗೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ಮಾಡಿ ನಿರ್ಧರಿಸಲಾಗುತ್ತದೆ ಎಂದರು
ಯಾವ ಗ್ಯಾರಂಟಿಯನ್ನೂ ನಿಲ್ಲಿಸಲ್ಲ : ಸಿಎಂ ಭರವಸೆ
ಗೃಹಲಕ್ಷ್ಮೀ, ಅನ್ನಭಾಗ್ಯ ಹಣ ಬಿಡುಗಡೆ ವಿಳಂಬದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಹಣ ಬಿಡುಗಡೆ ವಿಳಂಬವಾಗಿದೆ ಎಂದು ಯಾರು ಹೇಳಿದರು ? ಆ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ಪರಿಶೀಲಿಸಿ ವಿಳಂಬವಾಗಿದ್ದರೆ ಕೂಡಲೇ ಹಣ ಬಿಡುಗಡೆ ಮಾಡುತ್ತೇವೆ. ಯಾವ ಗ್ಯಾರಂಟಿ ಯೋಜನೆಯನ್ನೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಇಲ್ಲಿಯವರೆಗೆ ಮಾಡಿದ್ದೇವೆ, ಮುಂದೆಯೂ ಮಾಡುತ್ತೇವೆ ಎಂದು ಹೇಳಿದರು.

