ಬೆಂಗಳೂರು : ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ನ್ಯಾಯಯುತ ಮತ್ತು ನಿಷ್ಪಕ್ಷವಾತ ತನಿಖೆಗಾಗಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಹಕರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಆರೋಪಗಳು ಬಂದ ಸಂದರ್ಭದಲ್ಲಿ ಇದೇ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದರು. ಆಗ ಅವರು ‘ಅಧಿಕಾರದಲ್ಲಿ ಇರುವ ಕಾರಣ ತನಿಖೆ ಮೇಲೆ ಪ್ರಭಾವ ಆಗುತ್ತದೆ. ಪ್ರಭಾವ ಬೀರುವ ಸಾಧ್ಯತೆಗಳಿವೆ. ಈ ಸಾಧ್ಯತೆಗಳಿರುವ ಕಾರಣ ನ್ಯಾಯಯುತ ಮತ್ತು ನಿಷ್ಪಕ್ಷಪಾತ (ಫೇರ್ ಆಂಡ್ ಇಂಪಾರ್ಶಿಯಲ್) ತನಿಖೆ ಅಸಾಧ್ಯ. ಅದಕ್ಕೋಸ್ಕರ ಯಡಿಯೂರಪ್ಪ ಅಧಿಕಾರದಲ್ಲಿ ಇರಬಾರದು ಎಂದಿದ್ದರು ಎಂದು ವಿಜಯೇಂದ್ರ ನೆನೆಪಿಸಿದರು.