ಬೆಂಗಳೂರು : ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆಗಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಸೋಮವಾರ ಪರಿಷತ್‌ನಲ್ಲಿ ಬಿಜೆಪಿಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಪಿಎಲ್ ಕಾರ್ಡ್ ಹೊಂದಿರುವರ ಪೈಕಿ ಸುಮಾರು 20 ಲಕ್ಷ ಅನರ್ಹರಿದ್ದಾರೆ. ಇವರೆಲ್ಲರೂ ಎಪಿಎಲ್ ಕಾರ್ಡ್ ಪಡೆಯಬೇಕಿತ್ತು. ಈ ಹಿಂದೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ಪರಿಷ್ಕರಣೆಗೆ ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ, ಈಗ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಿಗ ಸೇರಿದಂತೆ ಮುಂತಾದವರನ್ನು ಒಳಗೊಂಡ ಸಮಿತಿ ರಚಿಸಿ, ಈ ಸಮಿತಿ ಮೂಲಕ ಖುದ್ದಾಗಿ ಪರಿಶೀಲಿಸಲು ನಿರ್ಧರಿಸಲಾಗಿದೆ ಎಂದರು.
ಸುಮಾರು 91000 ಅರ್ಜಿ ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಬಿಪಿಎಲ್ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗುವುದು. ಕೇಂದ್ರದ ಮಾನದಂಡ ಮುಂದಿಟ್ಟು ಪರಿಷ್ಕರಣೆ ಮಾಡಲಾಗುವುದು ಎಂದರು.

